ಮಂಗಳೂರು:ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ
ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದರು. ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ದಕ್ಷಿಣ ಕನ್ನಡದ ಜಿಲ್ಲೆಗೆ 10 ಸರಕಾರಿ ಮೊಂಟೆಸರಿಗಳು ಸೇರಿದಂತೆ 25 ಅಂಗನವಾಡಿ ಕೇಂದ್ರಗಳನ್ನು ಈ ವರ್ಷವೇ ನೀಡಲಾಗುವುದು. ಈ ಅಂಗನವಾಡಿ ಕೇಂದ್ರಗಳಿಗೆ ತಲಾ 20 ಲಕ್ಷ ರೂಪಾಯಿ ಅನುದಾನ ದೊರಕಿಸಲಾಗುವುದು ಎಂದರು.
ಸಮಾರಂಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು. ಸಂಘದ ಅಧ್ಯಕ್ಷರಾದ ಜ್ಯೋತಿ ಚೇಳ್ಯಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ, ಎಂಆರ್ ಪಿಎಲ್ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ ಮೀನಾಕ್ಷಿ, ಕಾರ್ಪೊರೇಟರ್ ಗಣೇಶ್ ಕುಲಾಲ್, ಪ್ರಾಧ್ಯಾಪಕಿ ಡಾ. ಸಬಿತಾ ಬನ್ನಾಡಿ, ಹಿರಿಯ ಲೇಖಕಿ ಇಂದಿರಾ ಹಾಲಂಬಿ ಸೇರಿದಂತೆ ಕರಾವಳಿಯ ಲೇಖಕರು, ವಾಚಿಕೆಯರು ಉಪಸ್ಥಿತರಿದ್ದರು.