ಸುಳ್ಯ:ರಾಜ್ಯ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತಿದೆ. ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಪೂ.10ಕ್ಕೆ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ
ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ನಗರ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸೇರಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಹೀಗೆ 5 ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕಿನ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ನೀಡಲಿದ್ದಾರೆ. ಅಪರಾಹ್ನ 2ಕ್ಕೆ ಕಡಬದಲ್ಲಿ ಗ್ಯಾರಂಟಿ ಸಮಾವೇಶ ನಡೆಯಲಿದೆ.

ಸಿದ್ಧತಾ ಸಭೆ:
ಗ್ಯಾರಂಟಿ ಸಮಾವೇಶದ ಪೂರ್ವಭಾವಿ ಸಭೆ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ತಹಶೀಲ್ದಾರ್ ಜಿ.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.














