ಸುಳ್ಯ: ಸರಕಾರ ಅನುಷ್ಠಾನ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನ ಸಾಮಾನ್ಯರ ಬದುಕಿನಲ್ಲಿ ದೊಡ್ಡ ಬದಲಾವಣೆ ತರಲು ಸಾಧ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ
ರಾಜ್ಯ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಬೃಹತ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು
ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ
ಕೆಲವೇ ತಿಂಗಳಲ್ಲಿ ಸಾವಿರಾರು ಕೋಟಿ ಯೋಜನೆಗಳನ್ನು ಜಾರಿ ಮಾಡುವ ಶಕ್ತಿ ಕಾಂಗ್ರೆಸ್ ಸರಕಾರಕ್ಕೆ ಮಾತ್ರ ಇದೆ. ಬಡತನ ನಿರ್ಮೂಲನೆ ಮಾಡಲು ಜನರನ್ನು ಆರ್ಥಿಕವಾಗಿ ಸಬಲೀಕರಣ ಮಾಡಲು ಗ್ಯಾರಂಟಿ ಯೋಜನೆಗಳಿಂದ ಸಾಧ್ಯವಾಗಿದೆ. ಇದನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ.ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತೇವೆ ಎಂದು ಅವರು ಹೇಳಿದರು. ಸಾಮಾಜಿಕ ಕಳಕಳಿಯಿಂದ ಜಾತ್ಯಾತೀತ ತತ್ವದಲ್ಲಿ ಕೆಲಸ ಮಾಡುವುದು ಸರಕಾರದ ತತ್ವ ಎಂದು ಅವರು ಹೇಳಿದರು.

ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಮಾತನಾಡಿ’ ಮುಂದಿನ ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಇರಲಿದೆ. ಯೋಜನೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಆಗಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ .ಮಂಜುನಾಥ ಭಂಡಾರಿ ಮಾತನಾಡಿ’ ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರ ಬದುಕು, ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇರುವ ತನಕ ಯೋಜನೆ ಇರಲಿದೆ ಎಂದು ಹೇಳಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತಮಾಡಿ ‘ಗ್ಯಾರಂಟಿ ಯೋಜನೆಗಳ ಮೂಲಕ ಸರಕಾರ ಜನರಿಗೆ ಬದುಕನ್ನು ನೀಡಿದೆ.ಮೂಲಭೂತ ಅಗತ್ಯತೆಗಳನ್ನು ಒದಗಿಸಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಗದೀಶ್ ನಾಯಕ್, ತಹಶೀಲ್ದಾರ್ ಜಿ.ಮಂಜುನಾಥ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೆಚ್.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಶೈಲಜಾ ದಿನೇಶ್ ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯ ಬಗ್ಗೆ ತಹಶೀಲ್ದಾರ್ ಮಂಜುನಾಥ್, ಗೃಹಜ್ಯೋತಿ ಯೋಜನೆಯ ಬಗ್ಗೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ರಾಮಚಂದ್ರ, ಶಕ್ತಿ ಯೋಜನೆಯ ಬಗ್ಗೆ, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಕರಾದ ಜಯಕರ ಶೆಟ್ಟಿ, ಯುವನಿಧಿ ಯೋಜನೆಯ ಬಗ್ಗೆ ಪ್ರದೀಪ್ ಡಿಸೋಜಾ ಮಾಹಿತಿ ನೀಡಿದರು. ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಗದೀಶ್ ನಾಯಕ್ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ವಂದಿಸಿದರು. ಅಚ್ಚುತ ಅಟ್ಲೂರು ಹಾಗೂ ಚಂದ್ರಮತಿ ಕೆ.ಕಾರ್ಯಕ್ರಮ ನಿರೂಪಿಸಿದರು.ಸಮಾವೇಶ ಸಂಘಟಿಸಲು ನೇತೃತ್ವ ವಹಿಸಿದ್ದ ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹಾಗೂ ತಹಶೀಲ್ದಾರ್ ಎನ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಹೀಗೆ 5 ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕಿನ ಸಾವಿರಾರು ಮಂದಿ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.









