ಸುಳ್ಯ:ಉತ್ತಮ ನಿರ್ವಹಣೆಯಿಂದ ಕಾಳುಮೆಣಸು ಮತ್ತು ಕಾಫಿ ಕೃಷಿಯಿಂದ ಉತ್ತಮ ಆದಾಯ ಪಡೆಯಲು ಸಾಧ್ಯ ಎಂದು ಸುಳ್ಯದಲ್ಲಿ ನಡೆಯುತ್ತಿರುವ ಹಲಸು ಮಾವು ಮೇಳದ ವಿಚಾರ ಸಂಕಿರಣದಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಟೀಮ್ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ
ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3 ದಿನಗಳ ಹಲಸು ಮತ್ತು ಮಾವು ಮೇಳದ ಅಂಗವಾಗಿ ಇಂದು ನಡೆದ ಕಾಳುಮೆಣಸಿನ ನಿರ್ವಹಣೆ ಕುರಿತ ವಿಚಾರಗೋಷ್ಠಿಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಾಳು ಮೆಣಸು ಬೆಳೆಗಾರ ಸುರೇಶ್ ಬಳ್ನಾಡು ಸಂಪನ್ಮೂಲ ವ್ಯಕ್ತಿಯಾಗಿ ಕಾಳುಮೆಣಸು ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾಧ್ಯಕ್ಷ ಎಂ.ಡಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,
ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರಮೋದ್ ಸಿ.ಎಂ, ಪ್ರಗತಿಪರ ಕೃಷಿಕ ಮಹೇಶ್ ಗಟ್ಟಿಗಾರು ಉಪಸ್ಥಿತರಿದ್ದರು.
ಕಾಫಿ ಗಿಡಗಳ ನಿರ್ವಹಣೆ ಕುರಿತ ವಿಚಾರಗೋಷ್ಠಿಯಲ್ಲಿ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ಎಸ್.ಎ.ನಡಾಫ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.ಕಾಫಿ ಕೃಷಿಕ ಗೋವಿಂದ ಭಟ್ ಚೈಪೆ ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರಮೋದ್ ಸಿ.ಎಂ.,ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಉಪಸ್ಥಿತರಿದ್ದರು.














