ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರದಿಂದ ಐದು ದಿನಗಳು ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ.ಮೇ 5ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು
ಇಲಾಖೆ ತಿಳಿಸಿದೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. . ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಇದೇ 6ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮೇ 4ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ. ಬುಧವಾರದಿಂದ ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.