ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ
‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಂಗಳವಾರವೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.