ಬೆಂಗಳೂರು: ರಾಜ್ಯದ ಕರಾವಳಿ ಸೇರಿ ವಿವಿಧೆಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ಬುಧವಾರ ‘ರೆಡ್ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ, ಕೊಡಗು,ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ
ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಹಾಸನಕ್ಕೆ ‘ಆರೆಂಜ್ ಅಲರ್ಟ್’, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ.
ಗುರುವಾರವೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.