ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರು ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಸೊರೇನ್ ಅವರಿಗೆ ಅಧಿಕಾರ ಮತ್ತು
ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಸೊರೇನ್ ಅವರ ತಂದೆ, ಜೆಎಂಎಂ ಮುಖ್ಯಸ್ಥ ಶಿಬು ಸೊರೇನ್, ತಾಯಿ ರೂಪಿ ಸೊರೇನ್, ಪತ್ನಿ ಕಲ್ಪನಾ ಸೊರೇನ್, ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್, ಪಕ್ಷ ಮತ್ತು ಮೈತ್ರಿಕೂಟದ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಕೆಲ ಕ್ಷಣ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ ಅವರು ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.