ಸುಳ್ಯ: ಎ.5 ರಂದು ಅ.3ಕ್ಕೆ ನಿಗದಿಯಾಗಿದ್ದ ತಾಲೂಕು ಆಸ್ಪತ್ರೆಯ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ.ಅಕಾಡೆಮಿ ಅಧ್ಯಕ್ಷರನ್ನು, ಸೂಡ ಅಧ್ಯಕ್ಷರನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಸರಕಾರದ ನಾಮ ನಿರ್ದೇಶಿತ ಅಧ್ಯಕ್ಷರುಗಳ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕದೆ ಕಡೆಗಣಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಸಚಿವರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಶೋಕಾಸ್ ನೋಟೀಸ್ ನೀಡಿದ್ದರು. ಇದೀಗ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕಾರ್ಯಕ್ರಮಕ್ಕೆ ಆರೋಗ್ಯ ಸಚಿವರ ಅನುಮತಿ ಪಡೆದು ಮುಂದಿನ ದಿನಾಂಕ ನಿಗದಿಪಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಸೂಚನೆಯ ಮೇರೆಗೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸುಳ್ಯ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ. ತಿಳಿಸಿದ್ದಾರೆ.
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರಕ್ಷಾ ಸಮಿತಿ ಅನುದಾನ 15 ಲಕ್ಷ ಅನುದಾನದಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರ ಅಳವಡಿಕೆ ಮಾಡಲಾಗಿತ್ತು. ಇದರ ಉದ್ಘಾಟನೆ ನಡೆಸಲು ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು.