ಮಂಗಳೂರು: ಡಿಸಿ, ಎ.ಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿ ಪಡಿಸಿಕೊಂಡು ಪ್ರಕರಣಗಳ ವಿಚಾರಣೆ ನಡೆಸಬೇಕು, ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇ ಬಾರದು. ವಿಚಾರಣೆ ನಡೆಸಿ ಇತ್ಯರ್ಥಪಡಿಸುವ ಮೂಲಕ ಸಾರ್ವಜನಿಕರಿಗೆ ಆಡಳಿತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್ ಅವರು ಸಂಬಂಧಿಸಿದ
ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳು ಇನ್ನು ಮುಂದೆ ಕಡ್ಡಾಯವಾಗಿ ಇ-ಆಫೀಸ್ (ಪೇಪರ್ ಲೆಸ್) ನಲ್ಲಿಯೇ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದ ಅವರು, ಯಾವ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನಕ್ಕೆ ತೊಡಕಾಗಿದೆ, ಯಾವ ಕಾರಣಕ್ಕಾಗಿ ಅದು ಆಗಿದೆ ಎಂಬುದನ್ನು ಲಿಖಿತವಾಗಿ ನೀಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಜಲ ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಕೆರೆಗಳನ್ನು ರಕ್ಷಿಸಲು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.
ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಮಲೇರಿಯಾ-ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬ್ಲಡ್ ಬ್ಯಾಂಕ್ಗಳಲ್ಲಿ ಅಗತ್ಯ ರಕ್ತ ಲಭಿಸುವಂತಿರಬೇಕು,
ಆಸ್ಪತ್ರೆಯಲ್ಲಿ ಔಷಧಿಗಳು, ಶಸ್ತ್ರಚಿಕತ್ಸಾ ಉಪಕರಣಗಳ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಪಡೆದರು. ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಣ ಇಲಾಖೆಯಿಂದ ಉತ್ತಮ ಕ್ರಮಗಳನ್ನು ರೂಪಿಸಬೇಕು, ಕ್ಷೀರಭಾಗ್ಯ, ಮೊಟ್ಟೆ ವಿತರಣೆಯಲ್ಲಿ ಯಾವುದೇ ಲೋಪ ಕಂಡುಬರಬಾರದು, ಜಿಲ್ಲೆಯಲ್ಲಿನ ಶಿಥಿಲಗೊಂಡ ಶಾಲಾ ಕೊಠಡಿಗಳ ದುರಸ್ತಿಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ನದಿ ಪಾತ್ರದ 50 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಯಾವುದೇ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದರು.
ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಗುರುತಿಸಿ, ಅವರನ್ನು ಒಂದೊಂದು ತಾಲೂಕುಗಳ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು, ಅವರು ತಮ್ಮ ಇಲಾಖೆಯ ಕಾರ್ಯಚಟುವಟಿಕೆಯೊಂದಿಗೆ ಅವರಿಗೆ ವಹಿಸಲಾದ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆಯ ಮೂಲಕ ನಡೆಯುವ ಹಾಸ್ಟೇಲ್ಗಳಿಗೆ ಭೇಟಿ ನೀಡಿ, ಕಟ್ಟಡದ ಸ್ಥಿತಿಗತಿಗಳು, ಅಲ್ಲಿನ ಕುಂದುಕೊರತೆಗಳು, ಅಲ್ಲಿ ನೀಡುವ ಊಟ ಉಪಹಾರ ಸೇವಿಸುವದು, ಅಲ್ಲಿಯ ಸ್ವಚ್ಛತೆಯ ಬಗ್ಗೆ ವರದಿ ನೀಡವುದು ಹಾಗೂ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವರದಿ ನೀಡುವಂತಹ ಕೆಲಸ ಮಾಡಬೇಕು. ಪ್ರತಿ ಹಾಸ್ಟೆಲ್ ನಲ್ಲಿ ಮೇನ್ಯು ಇರಲೇಬೇಕು. ಅದೇ ರೀತಿ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಹಾಗೂ ಆಹಾರ ಸುರಕ್ಷಿತವಾಗಿರುವ ಬಗ್ಗೆ ಖಾತ್ರಿ ಪಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್, ಪ್ರಬೋಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ವೇದಿಕೆಯಲ್ಲಿದ್ದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.