ಸುಳ್ಯ:ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ಸೂರಿಲ್ಲದ ಪ್ರತಿಯೊಬ್ಬರಿಗೂ ಸೂರು ಒದಗಿಸುವ ಸಂಕಲ್ಪ ನಮ್ಮದಾಗಬೇಕು, ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವ ಸಂಕಲ್ಪ ಮಾಡುವ ಮೂಲಕ ಸ್ವಾತಂತ್ರ್ಯವನ್ನು ಅರ್ಥ ಪೂರ್ಣವಾಗಿ ಮಾಡಬೇಕು. ಮೌಲ್ಯಯುತ ಶಿಕ್ಷಣ, ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು. ಪರಿಸರವನ್ನು ಉಳಿಸಲು, ಸ್ವಚ್ಛತೆಯನ್ನು ಕಾಪಾಡಲು ಆದ್ಯತೆ ನೀಡಬೇಕು.ಸೂರು ಇಲ್ಲದವರಿಗೆ ಸೂರು ಕಲ್ಪಿಸಿದವರನ್ನು, ಪರಿಸರವನ್ನು ಉಳಿಸುವವರನ್ನು, ಗಿಡ ನೆಡುವವರನ್ನು ಗುರುತಿಸಿ ಗೌರವಿಸುವಂತಾಗಬೇಕು ಎಂದು ಅವರು ಹೇಳಿದರು.
ಮುಂದಿನ ತಲೆಮಾರಿನಲ್ಲಿ ದೇಶಪ್ರೇಮ ಬೆಳೆಸಲು ಸ್ವಾತಂತ್ರ್ಯ ದಿನಾಚರಣೆ ಪ್ರೇರಣೆಯಾಗಬೇಕು.ಎಲ್ಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮನೋಭಾವನೆ ಬೆಳೆಸುವ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದು ಅವರು ಹೇಳಿದರು. ತಹಶೀಲ್ದಾರ್ ಜಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯದ ಸಂದೇಶ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಅಕಾಡೆಮಿ ಆಫ್ ಲಿವರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ,ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿದರು.
ಮಾಜಿ ಸೈನಿಕರಾದ ಕೆ.ಪಿ.ಜಗದೀಶ್, ಬಿ.ಕೆ.ಮಾಧವ, ರಾಮದಾಸ್ ಶೇಟ್, ಹಿರಿಯ ಪತ್ರಕರ್ತರಾದ ಸುರೇಶ್ ಬೆಳಗಜೆ, ಗಂಗಾಧರ ಮಟ್ಟಿ, ಎನ್.ಎ.ಅಬ್ದುಲ್ಲಾ ಅವರನ್ನು ಸನ್ಮಾನಿಸಲಾಯಿತು.
ಎಸ್ಐ ಈರಯ್ಯ ದೂಂತೂರು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ನ.ಪಂ.ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಶರೀಫ್ ಕಂಠಿ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಶಶಿಕಲಾ ನೀರಬಿದಿರೆ, ಕಿಶೋರಿ ಶೇಟ್, ಪೂಜಿತಾ, ಶಿಲ್ಪಾ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್.ಯು.ಕೆ ವಂದಿಸಿದರು. ಚಂದ್ರಮತಿ ಕೆ.ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಕರ್ಷಕ ಪಥ ಸಂಚಲನ, ದೇಶ ಭಕ್ತಿ ಗೀತ ಗಾಯನ ನಡೆಯಿತು.