ಸೇಂಟ್ ಲೂಸಿಯಾ:ಹೋದ ವರ್ಷ ಅಹಮದಾಬಾದಿನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಟಿ20 ವಿಶ್ವಕಪ್ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿತು. ಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೂಪರ್–8ರ ಹಂತದ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 24 ರನ್ ಅಂತರದಿಂದ ಸೋಲಿಸಿ ಅಜೇಯರಾಗಿ ಸೆಮಿಫೈನಲ್ ಪ್ರವೇಶ ಪಡೆಯಿತು.ಈ ಸೋಲಿನೊಂದಿಗೆ ಆಸ್ಟ್ರೇಲಿಯಾದ ಸೆಮಿಫೈನಲ್ ಹಾದಿ ಕಠಿಣವಾಗಿದೆ. ಮೊದಲು ಬ್ಯಾಟ್ ಮಾಡಿದ
ಭಾರತ ನಾಯಕ ರೋಹಿತ್ ಶರ್ಮ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಗುರಿ ಬೆನ್ನಟ್ಟಿದ
ಆಸ್ಟ್ರೇಲಿಯಾ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ಪರ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತೊಮ್ಮೆ ಗುಡುಗಿದರು. ಟ್ರಾವಿಸ್ ಹೆಡ್ ಹಾಗೂ ನಾಯಕ ಮೊಚೆಲ್ ಮಾರ್ಷ್ ಗೆಲುವಿಗೆ ಹೋರಾಟ ನಡೆಸಿದರೂ ಭಾರತದ ಕರಾರುವಕ್ಕಾದ ಬೌಲಿಂಗ್ ಮತ್ತು ಫೀಲ್ಡಿಂಗ್ನಿಂದ ಜಯ
ಕಸಿದುಕೊಂಡಿತು. ಟ್ರಾವಿಸ್ ಹೆಡ್ 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 76 ರನ್ ಬಾರಿಸಿದರು. ಮಾರ್ಷ್ 28 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್ವೆಲ್ 20, ಟಿಮ್ ಡೇವಿಡ್ 15ರನ್ ಬಾರಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 2, ಜಸ್ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಸ್ಪೋಟಕ ಬ್ಯಾಟಿಂಗ್ ನಡೆಸಿದ ನಾಯಕ ರೋಹಿತ್ ಶರ್ಮ ಕೇವಲ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಮುಗಿಲೆತ್ತರದ ಸಿಕ್ಸರ್ ನೆರವಿನಿಂದ 92 ರನ್ ಬಾರಿಸಿದರು. ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್ಗಳ ಸುರಿಮಳೆಗೈದ ರೋಹಿತ್ ಶರ್ಮ ಆಸೀಸ್ ಬ್ಯಾಟರ್ಗಳ ಬೆವರಿಳಿಸಿದರು. 19 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ ರೋಹಿತ್ ಶತಕದ ಅಂಚಿನಲ್ಲಿ ಎಡವಿದರು.
ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿಯೂ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದರು.ಆದರೆ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಈ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ತೋರಿದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ನೆರವಿನಿಂದ 31, ಶಿವಂ ದುಬೆ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 28 ರನ್, ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 27 ರನ್ ಬಾರಿಸಿದರು. ರೋಹಿತ್ ಶರ್ಮ ಹಾಗೂ ರಿಷಬ್ ಪಂತ್ ಎರಡನೇ ವಿಕೆಟ್ಗೆ 87 ರನ್ ಗಳಿಸಿದರು. ರಿಷಬ್ 15 ರನ್, ಜಡೇಜ ಅಜೇಯ 9 ರನ್ ಬಾರಿಸಿದರು. ರೋಹಿತ್ ಶರ್ಮ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.