ಗುವಾಹಟಿ: ಅಭಿಷೇಕ್ ಶರ್ಮ ಹಾಗೂ ನಾಯಕ ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ
ನ್ಯೂಜಿಲೆಂಡ್ 153 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 10 ಓವರ್ಗಳಲ್ಲಿ 2 ವಿಕೆಟ್ಗಳನ್ನು ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಮುಟ್ಟಿತು. ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.
ಆರಂಭಿ ಬ್ಯಾಟರ್ ಸಂಜು ಸ್ಯಾಮ್ಸನ್(0) ವಿಕೆಟ್ ಕಳೆದುಕೊಂಡಿತು. ಆದರೆ ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮ ಬಿರುಸಿನ ಬ್ಯಾಟಿಂಗ್ ನಡೆಸಿ ಕೇವಲ 19 ಎಸೆತಗಳಲ್ಲಿ 53 ರನ್ಗಳ ಜತೆಯಾಟ ನಡೆಸಿದರು. ಇಶಾನ್ ಇಶನ್ 13 ಎಸೆತಗಳಲ್ಲಿ 28 ರನ್ ಚಚ್ಚಿದರು. ಇಶಾನ್ ವಿಕೆಟ್ ಪತನದ ಬಳಿಕ ಸೂರ್ಯಕುಮಾರ್ ಮತ್ತು ಅಭಿಷೇಕ್ ಸಿಕ್ಸರ್ ಮತ್ತು ಬೌಂಡರಿಗಳ ಮಳೆಯನ್ನೇ ಸುರಿಸಿ ನೆರೆದಿದ್ದ ಪ್ರೇಕ್ಷಕರನ್ನು ಬರಪೂರ ರಂಜಿಸಿದರು.ಅಭಿಷೇಕ್ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೇವಲ 20 ಎಸೆತಗಳಲ್ಲಿ 7 ಬೌಂಡರಿ ಹಾಗು 5 ಸಿಕ್ಸರ್ ನೆರವಿನಿಂದ ಅಜೇಯ 68 ರನ್ ಬಾರಿಸಿದರು. 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ 26 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹೀತ ಅಜೇಯ 57 ರನ್ ಗಳಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 20 ಓವರ್ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 153 ರನ್ಗಳಿಸಿತು.
ನ್ಯೂಜಿಲೆಂಡ್ ಆರಂಭಿಕ ಆಟಗಾರರಾದ ಡೆವೊನ್ ಕಾನ್ವೇ ( 1 ರನ್), ಟಿಮ್ ಸೀಫರ್ಟ್ ( 12 ರನ್) ವೈಫಲ್ಯ ಅನುಭವಿಸಿದರು. ಉತ್ತಮ ಲಯದಲ್ಲಿದ್ದ ರಚಿನ್ ರವೀಂದ್ರ ಕೂಡ ಕೇವಲ 4 ರನ್ ಗಳಿಸಿ, ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.34 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ನ್ಯೂಜಿಲೆಂಡ್ ತಂಡಕ್ಕೆ ಗ್ಲೆನ್ ಫಿಲಿಪ್ಸ್ (48 ರನ್) ಹಾಗೂ ಮಾರ್ಕ್ ಚಾಪ್ಮನ್ (32 ರನ್) ಆಸರೆಯಾದರು.ಭಾರತದ ಪರ ಬೂಮ್ರಾ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಹಾಗೂ ರವಿ ಬಿಷ್ಣೋಯಿ ತಲಾ 2 ವಿಕೆಟ್ ಕಬಳಿಸಿದರು.












