ಮುಂಬೈ:ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಸಿಡಿಸಿದ ಭರ್ಜರಿ ಅರ್ಧ ಶತಕಗಳ ನೆರವಿನಿಂದ ಭಾರತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತಕ್ಕೆ ಮೊದಲ
ಓವರ್ನಲ್ಲಿಯೇ 4 ರನ್ ಗಳಿಸಿದ ನಾಯಕ ರೋಹಿತ್ ಶರ್ಮ ವಿಕೆಟ್ ನಷ್ಟವಾಯಿತು. ಬಳಿಕ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಎರಡನೇ ವಿಕೆಟ್ಗೆ 189 ರನ್ಗಳ ಭರ್ಜರಿ ಜೊತೆಯಾಟ ನಡೆಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಸ್ಪೋಟಕ ಇನ್ನಿಂಗ್ಸ್ ಕಟ್ಟಿದರು.ಕೊನೆಯಲ್ಲಿ ರವೀಂದ್ರ ಜಡೇಜ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಭಾರತದ ಸ್ಕೋರ್ ಏರಿಸಿದರು. ಗಿಲ್ 92 ಎಸೆತಗಳಲ್ಲಿ 11 ಬೌಂಡರಿ ಹಾಗು 2 ಸಿಕ್ಸರ್ ನೆರವಿನಿಂದ 92 ರನ್ ಗಳಿಸಿದರು.ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 11 ಬೌಂಡರಿ ನೆರವಿನಿಂದ 88 ರನ್ ಗಳಿಸಿದರು.
ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ನೆರವಿನಿಂದ 82 ರನ್ ಗಳಿಸಿದರು. ಜಡೇಜ 24 ಎಸೆತಗಳಲ್ಲಿ ತಲಾ ಒಂದು ಸಿಕ್ಸರ್ ಹಾಗೂ ಬೌಂಡರಿ ನೆರವಿನಿಂದ 35 ರನ್ ಬಾರಿಸಿದರು. ಕೆ.ಎಲ್.ರಾಹುಲ್ 21, ಸೂರ್ಯಕುಮಾರ್ ಯಾದವ್ 12 ರನ್ ಗಳಿಸಿದರು. ಶ್ರೀಲಂಕಾ ಪರ ದಿಲ್ಸನ್ ಮಧುಸಂಕ 5 ವಿಕೆಟ್ ಪಡೆದರು. ಸತತ ಆರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ ಇಂದು ಗೆದ್ದು ಸೆಮಿ ಫೈನಲ್ನಲ್ಲಿ ಸ್ಥಾನ ಗಿಟ್ಟಿಸುವ ತವಕದಲ್ಲಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯ ಆಡಿದ ತಂಡವನ್ನೇ ಕಣಕ್ಕಿಳಿಸಿತು.









