ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಾಳೆ (ಅ.24) ನಡೆಯಲಿದೆ. ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ. ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು, ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದಿಂದ ನಮಿಸಲು ದೇಶ-ವಿದೇಶಗಳಿಂದ
ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸಲಿದ್ದಾರೆ. ವಿಜಯದಶಮಿ ಮೆರವಣಿಗೆ ವಿಜಯದಶಮಿ ಮೆರವಣಿಗೆಗೆ ಅಂತಿಮ ಹಂತದ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪ್ರದರ್ಶಿಸುತ್ತಾ ‘ರಾಜಪಥ’ದಲ್ಲಿ ಸಾಗಲು ಕಲಾತಂಡಗಳು, ಸ್ತಬ್ಧಚಿತ್ರಗಳು ಸಜ್ಜಾಗಿವೆ. ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಅರಮನೆಯ ಬಲರಾಮ ದ್ವಾರದಲ್ಲಿ ಮಂಗಳವಾರ ಮಧ್ಯಾಹ್ನ1.46ರಿಂದ 2.08ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40ರಿಂದ 5ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಇತರ ಸಚಿವರುಗಳು ಭಾಗವಹಿಸಲಿದ್ದಾರೆ.