ಜಮ್ಮು:ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾಗಿದ್ದು 11 ಜನರು ಸಾವನ್ನಪ್ಪಿದ್ದು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ಪರಿಸ್ಥಿತಿಯನ್ನು ನಿಯಂತ್ರಿಸಲು
ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಹಾಗೂ ರಕ್ಷಣಾ ಪಡೆಗಳು ಜಂಟಿಯಾಗಿ ನಾಪತ್ತೆಯಾದವರ ಪತ್ತೆಗೆ ತೀವ್ರ ಹುಡುಕಾಟ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಾಂಗ್ಲಾ ಗ್ರಾಮದಲ್ಲಿ ಪ್ರವಾಹಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ,ಮುರ್ರಾ ಗ್ರಾಮದಲ್ಲಿ ಭೂಕುಸಿತಕ್ಕೆ ಮನೆಯೊಂದು ಸಂಪೂರ್ಣ ಹೂತು ಹೋಗಿದ್ದು ಮನೆಯಲ್ಲಿದ್ದರು ಅವಶೇಷಗಳಡಿ ಸಿಲುಕಿದ್ದಾರೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಮತ್ತು ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಜುಲೈ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.








