ಬೆಂಗಳೂರು: ಕೆಆರ್ಪಿಪಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಇಂದು ಬಿಜೆಪಿಗೆ ಮರು ಸೇರ್ಪಡೆಗೊಂಡರು. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಸಮ್ಮುಖದಲ್ಲಿ
ಜನಾರ್ದನ ರೆಡ್ಡಿ ಬಿಜೆಪಿ ಸೇರಿದರು. ಅವರಿಗೆ ವಿಜಯೇಂದ್ರ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಮಾಜಿ ಸಚಿವರಾದ ಸಿ.ಟಿ.ರವಿ, ಬಿ.ಶ್ರೀರಾಮುಲು, ಸಂಸದ ಪಿ.ಸಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.ಬಿಜೆಪಿಯಲ್ಲಿ ಕೆಆರ್ ಪಿಪಿ ಪಕ್ಷವನ್ನೂ ಜನಾರ್ದನ ರೆಡ್ಡಿ ವಿಲೀನಗೊಳಿಸಿದ್ದಾರೆ.
ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಯಾವುದೇ ಫಲಾಪೇಕ್ಷೆ ಇಲ್ಲದೇ ಬಿಜೆಪಿ ಸೇರಿದ್ದೇನೆ ಈ ಸಂದರ್ಭದಲ್ಲಿ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ದೇಶದ ಸಮಗ್ರತೆ, ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಾಗಿ ಭಾರತವನ್ನು ತರುವ ನಿಟ್ಟಿನಲ್ಲಿ ಕೆಲಸ ಮಾಡಿದ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಬಿಜೆಪಿ ಸೇರಿದ್ದೇನೆ ಎಂದರು









