ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ 30ರ ವರೆಗೆ ಹಮ್ಮಿಕೊಳ್ಳಲಾಗಿದೆ. ಪ್ರತೀ ಬಾರಿಯಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ
ಕೆ.ಎಂ.ಎಫ್ ನ ಲಸಿಕೆದಾರರು ಪ್ರತೀ ಮನೆ ಮನೆಗೆ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.ಕಾಲು ಬಾಯಿ ಜ್ವರ ರೋಗವು ವೈರಸ್ ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೆ ಪರಿಣಾಮಕಾರಿಯಾದ ವಿಧಾನವಾಗಿದೆ, ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರು ಸಹ ಪ್ರತೀ ಸುತ್ತಿನಲ್ಲಿ ಲಸಿಕೆ ಹಾಕುವುದು ಈ ರೋಗ ನಿಯಂತ್ರಣಕ್ಕೆ ಅವಶ್ಯವಾಗಿರುತ್ತದೆ. ರೈತರು ಹತ್ತಿರದ ಪಶುವೈದ್ಯಕೀಯ ಸಂಸ್ಥೆ/ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗಧಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬ್ಬಂದಿಯೊಡನೆ ಸಹಕರಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಶುಪಾಲನ ಇಲಾಖೆಯ ಮುಖ್ಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.