ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಕಮಲಾ ಅವರು ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಅವರನ್ನು ಅಗಲಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಬೆಂಗಳೂರಿನಲ್ಲಿ ಪುತ್ರಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ
10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್ 28ರಂದು ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ, ಪಿಹೆಚ್ಡಿ ಪದವಿ ಪಡೆದರು. ತಮ್ಮ ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.