ಕರಿಕೆ: ಗಡಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಗಡಿ ಗ್ರಾಮದ ಭಾಷಾ, ಸಾಂಸ್ಕೃತಿಕ ಉನ್ನತಿಗೆ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು
ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಗಡಿ ಗ್ರಾಮ ಕರಿಕೆ ಎಳ್ಳುಕೊಚ್ಚಿಯ ಬೇಕಲ್ ಉಗ್ಗಪ್ಪ ನಗರದಲ್ಲಿ ನಡೆದ ಗಡಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಜಿಲ್ಲಾಧಿಕಾರಿ ವೆಂಕಟರಾಜು, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಉಪಾಧ್ಯಕ್ಷೆ ಕಲ್ಪನಾ ಜಗದೀಶ್, ಕರಿಕೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬೇಕಲ್ ಡಿ ದೇವರಾಜ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಎಸ್.ರಮಾನಾಥ, ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಅಧ್ಯಕ್ಷ ಬೇಕಲ್ ಡಿ ಹರಿಪ್ರಸಾದ್ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭಕ್ಕಿಂತ ಮುನ್ನ ಗ್ರಾಮದ ಜಾನಪದ ಕಲಾ ತಂಡಗಳೊಂದಿಗೆ ವೈಭವದ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
ಬಳಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ‘ಕರಿಕೆ ಗ್ರಾಮ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರ’ ವಿಷಯದ ಕುರಿತು ಮತ್ತು ‘ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಷಯದ ಕುರಿತು ವಿಚಾರಗೋಷ್ಠಿಗಳು ನಡೆಯಿತು.









