ನವದೆಹಲಿ: ರಾಜ್ಯದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರಂದು ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಅ. 28ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚನ್ನಪಟ್ಟಣದಲ್ಲಿ ಶಾಸಕರಾಗಿದ್ದ ಎಚ್ ಡಿ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಶಾಸಕರಾಗಿದ್ದ ತುಕರಾಂ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿದ್ದರು. ಹೀಗಾಗಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇದೀಗ ಉಪಚುನಾವಣೆ ನಡೆಯಲಿದೆ.