ಬೆಂಗಳೂರು:ಪಶ್ಚಿಮ ಘಟ್ಟದ ಸಂರಕ್ಷಣೆ ಕುರಿತು ಕಸ್ತೂರಿರಂಗನ್ ನೇತೃತ್ವದ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಹಾಗೂ ರಾಜ್ಯದಲ್ಲಿನ ತೀವ್ರ ಸ್ವರೂಪದ ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದಿನಿಂದ ಮೂರು ದಿನ ರಾಜ್ಯ ವಿಧಾನ ಮಂಡಲದ ವಿಶೇಷ
ಅಧಿವೇಶನ ನಡೆಯಲಿದೆ.ಸೆ. 23ರವರೆಗೆ ನಡೆಯುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಈ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ. ಪಶ್ಚಿಮಘಟ್ಟದ ಕುರಿತ ಅಧಿಸೂಚನೆಯಿಂದ ಆತಂಕಗೊಂಡಿರುವ ಜನರ ಭಾವನೆ ಆಧರಿಸಿ ಚರ್ಚೆ ನಡೆದು ಸದನಗಳಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಕಸ್ತೂರಿರಂಗನ್ ವರದಿ ಆಧರಿಸಿ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ 1,449 ಗ್ರಾಮಗಳ ಜನರು ಆತಂಕದಲ್ಲಿದ್ದಾರೆ.ಈ ಹಿನ್ನಲೆಯಲ್ಲಿ ಚರ್ಚೆ ನಡೆದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ವರದಿಗೆ ಆಡಳಿತ ಪಕ್ಷ ಹಾಗೂ
ವಿರೋಧ ಪಕ್ಷಗಳು ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿವೆ. ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಅಧಿಸೂಚನೆ ಯಿಂದ ಆತಂಕದಲ್ಲಿರುವ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಭಿಪ್ರಾಯ ಆಲಿಸಿದ್ದಾರೆ.
ಇನ್ನು, ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಎದುರಾಗಿರುವ ಭೀಕರ ಬರ ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆಯಲಿದೆ. ಈಗಾಗಲೇ 124 ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ.








