ಸುಳ್ಯ:ನಾಡಪ್ರಭು ಕೆಂಪೇಗೌಡರ ಆದರ್ಶ ಮತ್ತು ಸಾಧನೆಗಳು ನಮ್ಮ ಜೀವನದಲ್ಲಿ ಮಾರ್ಗದರ್ಶನವಾಗಬೇಕು. ಅವರ ಯೋಚನೆ ಮತ್ತು ಯೋಜನೆಗಳಿಂದ ನಾಡು ಬೆಳೆದಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ
ನಾಡಪ್ರಭು ಕೆಂಪೇ ಗೌಡ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಸ್ತಾವಿಕವಾಗಿ
ಮಾತನಾಡಿದ ತಹಶೀಲ್ದಾರ್ ಜಿ.ಮಂಜುನಾಥ್ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರು ಹಲವು ಸಾಧನೆಗಳನ್ನು ಮಾಡಿದ್ದಾರೆ. ಉತ್ತಮ ಆಡಳಿತಗಾರರಾದ ಅವರನ್ನು ಸ್ಮರಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎಂದರು.ನಾಡಪ್ರಭು ಕೆಂಪೇ ಗೌಡ ಸಂಸ್ಮರಣಾ ಭಾಷಣ ಮಾಡಿದ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಸಂಜೀವ ಕುದ್ಪಾಜೆ ಕೆಂಪೇ ಗೌಡರು ನಮಗೆ ಆದರ್ಶಪುರುಷ, ಕೆರೆಗಳ ಪುನರುಜ್ಜೀವನ ಆದರೆ, ರಸ್ತೆ ಬದಿಯಲ್ಲಿ ಮರ ಗಿಡಗಳನ್ನು ನೆಟ್ಟು ಬೆಳೆಸಿದರೆ ಅದೇ ಅವರಿಗೆ ಸಲ್ಲಿಸುವ ಗೌರವ ಎಂದು ಅವರು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ,
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್,ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ದಯಾಮಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜೇನು ಕೃಷಿಕರಾದ ಲಿಂಗಪ್ಪ ಗೌಡ ಪಡ್ಲು, ಲತಾ ಎ ಜೋಗಿಮೂಲೆ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ನಡೆಸಿದ ಪ್ರಬಂಧ, ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಕೆಂಪೇ ಗೌಡರ ಕುರಿತು ಕಿರು ನಾಟಕ ಪ್ರದರ್ಶನ ಮಾಡಿದರು.
ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕರಾದ. ಆಶಾ ನಾಯಕ್ ಸ್ವಾಗತಿಸಿ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ದಯಾಮಣಿ ವಂದಿಸಿದರು. ಉಪನ್ಯಾಸಕರಾದ ದಾಮೋದರ ಎನ್. ಕಾರ್ಯಕ್ರಮ ನಿರೂಪಿಸಿದರು.