ಕೊಚ್ಚಿ: ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಡ್ಡಿ ರಹಿತ ಸಾಲ ಸೇರಿದಂತೆ ಹಲವು ಭರವಸೆಗಳನ್ನು ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.ಪ್ರಣಾಳಿಕೆ ಬಿಡುಗಡೆ ಮಾಡಿದ
ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್, ಕೇರಳದ ಪ್ರತಿ ಕುಟುಂಬಕ್ಕೆ 25 ಲಕ್ಷ ವಿಮಾ ಯೋಜನೆಯನ್ನು ಒದಗಿಸಲಾಗುವುದು ಮತ್ತು ಸಣ್ಣ ಉದ್ಯಮಗಳಿಗೆ 5 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.‘ಕೇರಳ ರಾಜ್ಯ ಸಾರಿಗೆಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಕಲ್ಯಾಣ ಪಿಂಚಣಿ ಮಾಸಿಕ 3 ಸಾವಿರ ಏರಿಕೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ, 100 ಕೋಟಿ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ಹಣಕಾಸಿನ ನೆರವು ಮತ್ತು ವಯನಾಡಿನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.









