ಸುಳ್ಯ; ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಎಲ್ಲಾ 19 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಈ ಹಿಂದೆ 19ರಲ್ಲಿ 17 ಸ್ಥಾನ ಗೆದ್ದಿದ್ದೇವೆ. ಈ ಬಾರಿ 19 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಸಮಾಜ ಕಲ್ಯಾಣ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ. ಈ ಬಾರಿ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಗೆಲುವು ನಿಶ್ಚಿತ ಎಂದರು. ಸಚಿವ. ಎಸ್.ಅಂಗಾರ ಅವರು 6 ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಹಾಗೂ ಕೇಂದ್ರ ಸರಕಾರಗಳ ಸಧನೆಯ ಆಧಾರದಲ್ಲಿ ಬಹಳ ದೊಡ್ಡ ಅಂತರದ ಗೆಲುವು ಸಾಧ್ಯ. ಈಗಾಗಲೇ ಕ್ಷೇತ್ರದಲ್ಲಿ ಎರಡು ಹಂತದಲ್ಲಿ ಪ್ರತಿ ಮನೆಯನ್ನೂ ಮುಟ್ಟುವ ಕಾರ್ಯ ನಡೆದಿದೆ. ಕಾಂಗ್ರೆಸ್ ಪಕ್ಷ
ಅಪ ಪ್ರಚಾರ ಮಾಡುವುದರಲ್ಲಿಯೇ ಕಾಲ ಕಳೆದಿದೆ. ಅವರು ನೀಡುವ ಗ್ಯಾರಂಟಿ ಕಾರ್ಡ್ನ್ನು ಜನರು ನಂಬುವುದಿಲ್ಲ. ರಾಜ್ಯದಲ್ಲಿ 125 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಮತದಾರರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಜಿ.ಪಂ.ಮಾಜಿ ಸದಸ್ಯ ಎಸ್.ಎನ್.ಮನ್ಮಥ,ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಮುಖಂಡರಾದ ಶ್ಯಾಮ್ ಪಾನತ್ತಿಲ, ಶೀನಪ್ಪ ಬಯಂಬು, ಸುನಿಲ್ ಕೇರ್ಪಳ,ಪ್ರಸಾದ್ ಕಾಟೂರು, ಸೀತಾರಾಮ ಕೊಲ್ಲರಮೂಲೆ, ಶಂಕರಲಿಂಗಂ, ಚಂದ್ರಶೇಖರ ನೆಡಿಲು ಮತ್ತಿತರರು ಉಪಸ್ಥಿತರಿದ್ದರು.