ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರಕಾರ ನೀಡಿದ್ದ ಅನುಮತಿ ಹಿಂಪಡೆದ ಈಗಿನ ಸರಕಾರದ ಕ್ರಮ ಸ್ವಾಗತಾರ್ಹ ಮತ್ತು ಸಮರ್ಥನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ಕೇವಲ ಮೌಖಿಕ ಸೂಚನೆಯಷ್ಟನ್ನೇ ಆಧರಿಸಿ ಸಿಬಿಐ ತನಿಖೆಗೆ

ಆದೇಶಿಸಲಾಗಿತ್ತು. ಸಭಾಧ್ಯಕ್ಷರ ಅನುಮತಿ ಪಡೆಯದೇ ಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಇದು ಕಾನೂನುಬಾಹಿರವಾಗಿತ್ತು ಅದನ್ನು ಈಗಿನ ಸರಕಾರ ಹಿಂಪಡೆದಿರುವುದು ಕಾನೂನುಬದ್ಧವಾಗಿದೆ. ಕೇವಲ ರಾಜಕೀಯ ದ್ವೇಷದಿಂದ ಈ ರೀತಿ ತನಿಖೆಗೆ ಹಿಂದಿನ ಬಿಜೆಪಿ ಸರಕಾರ ಆದೇಶ ನೀಡಿತ್ತು ಎಂದು ಅವರು ಹೇಳಿದರು.
ಸುಳ್ಯದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ನಡೆಸಲು ವರ್ಕ್ ಆರ್ಡರ್ ಆಗಿದೆ. ಸದ್ಯದಲ್ಲಿಯೇ ಕಾಮಗಾರಿ ಆರಂಭ ಆಗಲಿದೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆಯಡಿ ಹಣ ಬಾರದ ಅರ್ಹ ಫಲಾನುಭವಿಗಳ ಖಾತೆಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಎಲ್ಲರಿಗೂ ಹಣ ದೊರೆಯುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕೆಪಿಸಿಸಿ ಸದಸ್ಯೆ ಸರಸ್ವತಿ ಕಾಮತ್, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ಉಪಸ್ಥಿತರಿದ್ದರು.









