ಸುಬ್ರಹ್ಮಣ್ಯ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕೆಂದು ಆಗ್ರಹಿಸಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಕಾಲೇಜಿನಿಂದ
ಕಾಲ್ನಡಿಗೆ ಮೂಲಕ ಹೊರಟ ವಿದ್ಯಾರ್ಥಿಗಳ ಜಾಥವು ಮುಖ್ಯ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಕೆಎಸ್ಆರ್ಟಿಸಿ ನಿಲ್ದಾಣದವರೆಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮಾತನಾಡಿದರು. ಬಳಿಕ ಸ್ಥಳಕ್ಕೆ

ಆಗಮಿಸಿದ ಕೆಎಸ್ಆರ್ಟಿಸಿ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳು ಸಮಸ್ಯೆಯನ್ನು ವಿವರಿಸಿದರು. ಬೆಳಗ್ಗೆ ಕಾಲೇಜಿಗೆ ಬರಲು ಹಾಗೂ ಸಂಜೆ ಮನೆಗೆ ತಲುಪಲು ತುಂಬಾ ತೊಂದರೆ ಆಗುತ್ತಿದೆ ಎಂದು ದೂರಿದರು.ಸಮಸ್ಯೆ ಸರಿಪಡಿಸದಿದ್ದರೆ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿ ಸುಳ್ಯ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸುಬ್ರಮಣ್ಯ ಬಸ್ ನಿಲ್ದಾಣದ ಸಂಚಾರ ನಿಯಂತ್ರಣ ಅಧಿಕಾರಿ ಬಾಬು ಅವರು ಈ ಕೂಡಲೇಉನ್ನತ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಬಸ್ಸಿನ ಸಮಸ್ಯೆಯನ್ನು ಮನವರಿಕೆ ಮಾಡಿ ಸರಿಪಡಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನ ನೇತೃತ್ವವನ್ನು ಕಾಲೇಜಿನ ವಿದ್ಯಾರ್ಥಿ ನಾಯಕರು ಹಾಗೂ ಎಬಿವಿಪಿ ಪದಾಧಿಕಾರಿಗಳಾದ ಶ್ರೀಜಿತ್, ನಂದಕುಮಾರ್ ಪವಿತ್ರಮಜಲು, ದಿಶಾಂತ್, ಕಾರ್ತಿಕ್, ಹೇಮಂತ್, ಮುಳಿಯ ಸಾತ್ವಿಕ್ ಹಾಗೂ ಪ್ರೀತೇಶ್ ವಹಿಸಿದ್ದರು.