ಬೆಂಗಳೂರು: ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ. 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ನಿಗಮದ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು
ಅನುಮತಿ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 09-03-2023 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ.ರಾ.ರ.ಸಾ.ನಿಗಮವು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 09-03-2023 ರಿಂದ 29-03-2023 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದುರುಗುವಾಗ ‘ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ’ವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದೆ.