ಸುಳ್ಯ:ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಶುಕ್ರವಾರ ಸಂಜೆ ಮಳೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಉತ್ತಮ ಮಳೆಯಾಗಿದೆ.ಹರಿಹರ ಪಲ್ಲಾತಡ್ಕದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದೆ. ಕಲ್ಲಾಜೆ, ಪಟೋಳಿಯಲ್ಲಿ ಮಳೆಯಾಗಿದೆ.ಮಡಪ್ಪಾಡಿಯಲ್ಲಿ ಸಾಧಾರಣ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ
ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಮಳೆಯಾಗಿದೆ. ಕೆಲವು ಕಡೆ ಹನಿ ಮಳೆಯಷ್ಟೇ ಸುರಿದಿದೆ.
ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ:
ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೆ.11ರಿಂದ 14ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 11ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 12ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 13ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ಹಾಗೂ ಮತ್ತೆ ಕೆಲವು ಕಡೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗಲಿದೆ.