ವರದಿ:ರತ್ನಾಕರ ಸುಬ್ರಹ್ಮಣ್ಯ.
ಚಿತ್ರಗಳು:ಲೋಕೇಶ್ ಬಿ.ಎನ್.,ಪ್ರಕಾಶ್ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ:ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಮಾಪ್ತಿಗೊಂಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು. ಎಲ್ಲಾ

ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು. ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀ ದೇವರ ಕೊಪ್ಪರಿಗೆ ಅನ್ನದ ಬೋಜನ ಪ್ರಸಾದ ಸ್ವೀಕರಿಸಿದರು.
ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ನೀರನ್ನು ಮದ್ಯಾಹ್ನದ ನಂತರ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು.ಬಳಿಕ ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆಯಿತು. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು.

ಮಂಗಳವಾರ ಬೆಳಗ್ಗೆ ಸುಮುಹೂರ್ತದಲ್ಲಿ ಕೊಪ್ಪರಿಗೆ ಇಳಿಯಿತು. ಆ ಬಳಿಕ ದೇವಳದಲ್ಲಿ ಮಹಾ ಸಂಪ್ರೋಕ್ಷಣಾ ಹೋಮವು ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವೈಧಿಕ ವಿದಿವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ,ಡಾ. ರಘು. ಬಿ, ಮಹೇಶ್ ಕುಮಾರ್, ಕರಿಕ್ಕಳ,ಅಜಿತ್ ಕುಮಾರ್, ಸೌಮ್ಯ ಭರತ್, ಲೀಲಾ ಮನಮೋಹನ್, ಪ್ರವೀಣ ಮರುವಂಜ,ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ಮಾ, ಸ್ಟರ್ಪ್ಲಾನ್ ಮೇಲ್ವಿಚಾರಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಪುಟಾಣಿಗಳೊಂದಿಗೆ ನೀರಾಡಿದ ಯಶಸ್ವಿ:
ಶ್ರೀ ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ, ಮಕ್ಕಳೊಂದಿಗೆ ನೀರಾಟವಾಡಿ, ತಾನು ಸಂಭ್ರಮ ಪಡುವುದರೊಂದಿಗೆ, ಭಕ್ತಾಧಿಗಳಿಗೂ ಹೆಚ್ಚಿನ ಸಂತಸವನ್ನು ನೀಡಿತು.ಅಲ್ಲದೆ ಪುಟಾಣಿ ಮಕ್ಕಳು ಮಿಂದೆದ್ದು ಸಂಭ್ರಮಿಸಿದರು.








