ಬೆಂಗಳೂರು: ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವ ಕುರಿತ ಮನವಿಯನ್ನು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅವರು ಈ ಭರವಸೆ ನೀಡಿದರು. ಗ್ರಾಮೀಣ ಪತ್ರಕರ್ತರಿಗೆ
ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆದು, ಮನವಿ ಸಲ್ಲಿಸಲಾಯಿತು. ಮನವಿಯಲ್ಲಿನ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಅಲ್ಲದೆ ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ 500 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಪದಾಧಿಕಾರಿಗಳಾದ ದಿನೇಶ್ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ.ಎನ್.ಕುಮಾರ್, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.