ಸುಳ್ಯ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಭಾಗದ ಪತ್ರಕರ್ತರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದ್ದು ಗ್ರಾಮೀಣ ಪತ್ರಕರ್ತರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿನಂತಿಸಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ
ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.ಅರೆಕಾಲಿಕ, ಗ್ರಾಮೀಣ ಪತ್ರಕರ್ತರ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ಗ್ರಾಮೀಣ ಪತ್ರಕರ್ತರಿಗೆ ಹೆಚ್ಚು ಸೌಲಭ್ಯಗಳನ್ನು ನೀಡಬೇಕು ಎಂದು ಸರಕಾರದ ಮುಂದೆ ಬೇಡಿಕೆ ಇರಿಸಲಾಗಿದೆ ಎಂದು ಅವರು ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎನ್.ಪುಷ್ಪರಾಜ್ ‘ದೇಶದ ವಿವಿಧ ರಾಜ್ಯಗಳ ಪತ್ರಕರ್ತರಿಗೆ ಸರಕಾರ ನೀಡುವ ಸೌಲಭ್ಯಗಳ ಬಗ್ಗೆ ಅಧ್ಯಯನ ನಡೆಸಿ ಅಲ್ಲಿನ ಯೋಜನೆಗಳನ್ನು ರಾಜ್ಯದಲ್ಲಿಯೂ ಅನುಷ್ಠಾನ ಮಾಡಬೇಕು ಎಂಬ ಪ್ರಸ್ತಾಪವನ್ನು ಸರಕಾರದ ಮುಂದಿಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಖಂಡ ಭಾರತ ಸನಾತನ ಸಂತ ಸಮಿತಿಯ ಉಪಾಧ್ಯಕ್ಷ ಹಾಗೂ ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಯೋಗೀಶ್ವರ ಸಿದ್ಧಮಠದ ಧರ್ಮದರ್ಶಿ ರಾಜೇಶ್ ನಾಥ್ ಜೀ ಮಾತನಾಡಿ ದೇಶದ ಅಸ್ಮಿತೆಯನ್ನು ಉಳಿಸುವಲ್ಲಿ ಪತ್ರಕರ್ತರ ಜವಾಬ್ದಾರಿ ದೊಡ್ಡದಿದೆ. ಸರಕಾರ ಮತ್ತು ಸಮಾಜದ ಕೊಂಡಿಯಾಗಿ ಕೆಲಸ ಮಾಡುವ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕಾದ ಜವಾಬ್ದಾರಿ ಸಮಾಜಕ್ಕೆ ಇದೆ ಎಂದು ಹೇಳಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ
ಲೋಕೇಶ್ ಪೆರ್ಲಂಪಾಡಿ ನೇತೃತ್ವದ ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಆಂಬುಲೆನ್ಸ್ ಚಾಲಕ ಹನೀಫ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾಧ್ಯಕ್ಷ ಬಿ.ಎನ್. ಪುಷ್ಪರಾಜ್, ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ ಅವರನ್ನು ಗೌರವಿಸಲಾಯಿತು.

ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಸಿದ್ದಿಕ್ ನೀರಾಜೆ ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೇಟ್ಟಿ ಸ್ವಾಗತಿಸಿ, ನಿರ್ದೇಶಕ ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ಸನ್ಮಾನ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ
ದಯಾನಂದ ಕೊರತ್ತೋಡಿ ವಂದಿಸಿದರು, ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.




