ಸುಳ್ಯ: ಸುಳ್ಯದ ಗುರುಂಪು ಬಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದು ಮಣ್ಣಿನಡಿಗೆ ಸಿಲುಕಿ ಮೂರು ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇಬ್ಬರು ಪುರುಷರು ಹಾಗು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ಮುಂಡರಗಿಯ ಸೋಮಶೇಖರ ರೆಡ್ಡಿ(45) ಪತ್ನಿ ಶಾಂತಾ(40) ಹಾಗು ಮತ್ತೊರ್ವ
ಪುರುಷ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಗ್ನಿಶ್ಯಾಮಕ ದಳ, ಪೊಲೀಸ್ ಮತ್ತಿತರರು ಕಾರ್ಯಾಚರಣೆ ನಡೆಸಿ ಮಣ್ಣಿನಡಿಯಲ್ಲಿ ಸಿಲುಕಿ ಕೊಂಡವರನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗುರುಂಪು ಬಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿತ ಉಂಟಾಗಿದೆ.

7 ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಇದರಲ್ಲಿ ಮೂರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿ ಕೊಂಡರು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿಂದತೆ ಅಧಿಕಾರಿಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಮಣ್ಣು ಅವಘಡ ಸಂಭವಿಸಿತು.
ಸಚಿವ ಎಸ್.ಅಂಗಾರ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.