ನವದೆಹಲಿ: ನೂತನ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ( ಜೂನ್ 24) ಪ್ರಾರಂಭವಾಗಲಿದೆ. ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆ ನಡೆಯಲಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ
ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಾರ್ವತ್ರಿಕ ಚುನಾವಣೆಗಳು ನಡೆದ ನಂತರ ಇದು ಮೊದಲ ಲೋಕಸಭೆ ಅಧಿವೇಶನವಾಗಿದೆ. 18ನೇ ಲೋಕಸಭೆಯಲ್ಲಿ, ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ. ಬಿಜೆಪಿ 240 ಸದಸ್ಯರನ್ನು ಹೊಂದಿದೆ. ಪ್ರತಿಪಕ್ಷ ಇಂಡಿಯಾ ಬಣವು 234 ಸ್ಥಾನಗಳನ್ನು ಹೊಂದಿದೆ, ಕಾಂಗ್ರೆಸ್ 99 ಸ್ಥಾನಗಳನ್ನು ಹೊಂದಿದೆ.
ಬೆಳಗ್ಗೆ 11 ಗಂಟೆಯಿಂದ ಪ್ರಧಾನಿ ಮೋದಿ ಮತ್ತು ಅವರ ಮಂತ್ರಿಮಂಡಲ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇತರರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಧಾನಿ ಮೋದಿ ಮತ್ತು ಅವರ ಮಂತ್ರಿ ಮಂಡಳಿ ಸೇರಿದಂತೆ ಹೊಸದಾಗಿ ಚುನಾಯಿತರಾದ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮರುದಿನ (ಜೂನ್ 25) 264 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಂಬಂಧಿಸಿದಂತೆ ಪ್ರಧಾನಿ ಉತ್ತರ ನೀಡಲಿದ್ದಾರೆ.