ಹೊಸದಿಲ್ಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಉಜ್ಜಯನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಆಯ್ಕೆಯಾಗಿದೆ. ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಯಾದವ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರು.ಐವತ್ತೆಂಟು ವರ್ಷದ ಯಾದವ್ ಅವರು ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿ
ಆಯ್ಕೆಯಾಗಿದ್ದಾರೆ. ಜಗದೀಶ್ ದಿಯೋರ ಮತ್ತು ರಾಜೇಶ್ ಶುಕ್ಲಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆಮಾಡಲಾಗಿದೆ.
ಚುನಾವಣೆ ಸ್ಪರ್ಧಿಸಿದ್ದ ಸಂಸದರಲ್ಲಿ ಒಬ್ಬರಾಗಿದ್ದ ಮಾಜಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ. ಮಧ್ಯಪ್ರದೇಶದ 230 ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಮತದಾನ ನಡೆದಿತ್ತು. 163 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಆ ಮೂಲಕ ಕಳೆದ 19 ವರ್ಷಗಳಿಂದ ನಿರಂತರವಾಗಿ ಬಿಜೆಪಿ ಅಧಿಕಾರದಲ್ಲಿದೆ. ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ 2013ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದವರು. 2018ರಲ್ಲಿ ಹಾಗೂ 2023ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.









