ಮಂಗಳೂರು: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಖಾಸಗೀ ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.
ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಗಾಯದ ತೀವ್ರತೆ ನೋಡಿಕೊಂಡು ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಸಂತ್ರಸ್ತೆಯರಿಗೆ ಪ್ರಾಥಮಿಕ ಚಿಕಿತ್ಸೆಗೆ ತಕ್ಷಣ ತಲಾ 4 ಲಕ್ಷವನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಒಟ್ಟು 20 ಲಕ್ಷರೂವರೆಗೆ ಪರಿಹಾರ ನೀಡಲು ಅವಕಾಶ ಇದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುತೇನೆ’ ಎಂದರು. ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ಎರಡು ವಾರದ ಚಿಕಿತ್ಸೆ ಬಳಿಕ ಪ್ಲಾಸ್ಟಿಕ್ ಸರ್ಜರಿ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ ಎಂದರು.