ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ
ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ ನಡೆಸಿದೆ. ಖರ್ಗೆ ಅವರು ಆಗಮಿಸುವ ಬಗ್ಗೆ ಕಾಂಗ್ರೆಸ್ ಮುಖಂಡರು ಖಚಿತಪಡಿಸಿದ್ದಾರೆ. ಏ.25ರಂದು ಖರ್ಗೆ ಅವರು ಸುಳ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಮಾಜಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗು ಮತ್ತಿತರ ನಾಯಕರು ಈ ಕುರಿತು ಚರ್ಚಿಸಿ ರೂಪುರೇಷೆ ತಯಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ಧರಾಮಯ್ಯ ಸೇರಿದಂತೆ ರಾಷ್ಟ ಹಾಗು ರಾಜ್ಯಮಟ್ಟದ ನಾಯಕರನ್ನು ಪ್ರಚಾರಕ್ಕೆ ಕರೆಸುವ ಪ್ರಯತ್ನಗಳು ನಡೆಯುತಿದೆ.