ಸುಳ್ಯ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15 ರಂದು ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿಯ ಸಿದ್ಧತೆ ಕುರಿತು ದ.ಕ.ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಹಾಗೂ
ಇತರ ಅಧಿಕಾರಿಗಳು ಮಾನವ ಸರಪಳಿ ಸಾಗುವ ಪಥದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಳ್ಯ ತಾಲೂಕಿನ ಕನಕಮಜಲಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ತಾಲೂಕು ಅಧಿಕಾರಿಗಳಿಂದ ಮಾನವ ಸರಪಳಿ ಆಯೋಜನೆಗೆ ನಡೆಸಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ಮಾನವ ಸರಪಳಿ ಯಶಸ್ವಿ ಆಯೋಜನೆ ಬಗ್ಗೆ ನಿರ್ದೇಶನಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.