ಸುಳ್ಯ:ಪ್ರಜಾಪ್ರಭುತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಸೆ.15ರಂದು ನಡೆಯುವ ಮಾನವ ಸರಪಳಿಯ ಕುರಿತು ಎರಡನೇ ಹಂತದ
ಪೂರ್ವಭಾವಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ.10ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಕನಕಮಜಲಿನಿಂದ ಮುಖ್ಯರಸ್ತೆಯಲ್ಲಿ ಸುಳ್ಯ ಮೂಲಕ ಸಂಪಾಜೆ ತನಕ ಮಾನವ ಸರಪಳಿ ರಚನೆ ಮಾಡಲಾಗುವುದು. ಮಾನವ ಸರಪಳಿ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಸುಮಾರು 35 ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿಕೊಂಡು ಏಕಕಾಲದಲ್ಲಿ ಮಾನವ ಸರಪಳಿ ರಚನಾ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಧರಿಸಲಾಯಿತು. ಈ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಮೂಲಕ ನಡೆಸುವಂತೆ ಸೂಚಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ , ತಹಶೀಲ್ದಾರ್ ಮಂಜುನಾಥ್ ಎಂ, ಇ ಒ ರಾಜಣ್ಣ , ಪ್ರಬಾರ ಬಿಇಒ ಶೀತಲ್ ಯು ಕೆ , ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮಾದೇವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.