ಮಂಗಳೂರು:ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿ, ಮೀನುಗಾರಿಕಾ ಕ್ಷೇತ್ರ, ಪ್ರವಾಸೋದ್ಯಮ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದರು.ಅವರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ವಿವಿಧ ಕೈಗಾರಿಕೆ, ಮೀನುಗಾರಿಕಾ ಸಂಘಟನೆಗಳು, ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಜಮೀನುಗಳ ಕೊರತೆ ಇರುವ ಬಗ್ಗೆ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಸರಕಾರವು ಗಮನಹರಿಸಲಿದೆ. ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಒತ್ತು ನೀಡಲಿದೆ. ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಮಾತನಾಡಿ ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಚಿಂತಿಸಲಾಗಿದ್ದು, ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಅಭಿವೃದ್ಧಿ, ಆನೆ ಶಿಬಿರ, ಸಿ.ಆರ್.ಝೆಡ್ ನಿಯಮ ಪರಿಷ್ಕರಣೆ, ಕರಾವಳಿ ರಸ್ತೆ ಅಭಿವೃದ್ಧಿ ಮತ್ತಿತರ ಯೋಜನೆಗಳ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮತ್ತಿತ್ತರರು ಇದ್ದರು.











