ಮಂಗಳೂರು: ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್, ಇದರಲ್ಲಿ
16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು. ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು. ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಮೀನುಗಾರಿಕೆಗೆ ಸಂಬಂಧಿಸಿದಂತೆ ಫಿಶರೀಸ್, ಎಕಾನಮಿ ವಿವಿ ಸ್ಥಾಪಿಸಲಾಗುವುದು. ಪ್ರಸ್ತುತ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ ಮಾಡಲಾಗುವುದು. ಈ ಭಾಗದಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗೆ ಬೇಡಿಕೆ ಬಂದಿದೆ ಎಂದು ತಿಳಿಸಿದ ಅವರು ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 549 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬೆಳೆದಿರುವ ಜಿಲ್ಲೆ. ಇಡೀ ದೇಶ ದಕ್ಷಿಣ ಕನ್ನಡದ ಇತಿಹಾಸ ಪರಂಪರೆಯನ್ನು ತಿಳಿದಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ನಾವು ಅಳಿಲು ಸೇವೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ತುಳುವನ್ನು ಘೋಷಣೆ ಮಾಡಲು ನಿರ್ಧರಿಸಲಾಗಿದೆ.
ನಾವು ಜನರ ಭಾವನೆ ಮೇಲಲ್ಲ;ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲ್ಲ. ಸಾಮಾಜಿಕ ಆರ್ಥಿಕ ಶಕ್ತಿ ತುಂಬಿ ಬದುಕು ಕಟ್ಟಿಕೊಡಲಾಗುವುದು ಎಂದು ತಿಳಿಸಿದರು.
ಮಂಗಳೂರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಇದೆ. ದಕ್ಷಿಣ ಕನ್ನಡದ ಬದಲಿಗೆ ಮಂಗಳೂರು ಎಂದು ಹೆಸರಿಸುವ ಬಗ್ಗೆ ಜನಾಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಎಂದರು. ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಸುಮಾರು 113.89 ಎಕರೆ ಪ್ರದೇಶವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಡೇಟಾ ಸೆಂಟರ್ಗಳು ಹಾಗೂ ಹೊಸ ಉತ್ಪಾದನಾ ಘಟಕಗಳಿಗೆ ಅವಕಾಶ ಕಲ್ಪಿಸುವ ಪ್ರಸ್ತಾವವೂ ಇದೆ.
ಪುತ್ತೂರು ತಾಲೂಕಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆ, ಹಾಸ್ಟೆಲ್ ಸೇರಿದಂತೆ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕೆ 549.79 ಕೋಟಿ ರೂ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೂ ಸರ್ಕಾರ ಅನುದಾನ ಘೋಷಿಸಿದೆ.ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು 40 ಲಕ್ಷದಿಂದ 1 ಕೋಟಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ರಸ್ತೆ, ಸೇತುವೆ, ಬಂದರು ಮತ್ತು ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಲೈಟ್ಹೌಸ್ ಮತ್ತು ಪ್ರವಾಸೋದ್ಯಮ ಮೂಲಸೌಕರ್ಯ, ಬಂದರು ಅಭಿವೃದ್ಧಿ ಹಾಗೂ ಪ್ರಮುಖ ಸಂಪರ್ಕ ಮಾರ್ಗಗಳ ಸುಧಾರಣೆಗೆ ಸಹ ಆದ್ಯತೆ ನೀಡಲಾಗಿದೆ.ಆರೋಗ್ಯ, ಶಿಕ್ಷಣ ಮತ್ತು ಹೊಸ ಮೂಲಸೌಕರ್ಯ
ವೈದ್ಯಕೀಯ ಶಿಕ್ಷಣದ ಜೊತೆಗೆ ಕೈಗಾರಿಕೆ, ಪ್ರವಾಸೋದ್ಯಮ, ಮೀನುಗಾರಿಕೆ ಮತ್ತು ನಗರ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸುವ ಹಲವು ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಮಂಗಳೂರು ಹಾಗೂ ಕರಾವಳಿ ಭಾಗದ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಕೈಗಾರಿಕಾ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಇಂತಹ ಸಂಪುಟ ಸಭೆಗಳನ್ನು ನಡೆಸುವ ಉದ್ದೇಶವಿದೆ ಎಂದು ಸಿಎಂ ಹೇಳಿದರು.
ಒಟ್ಟಿನಲ್ಲಿ, ತುಳು ಭಾಷೆಯ ಆಡಳಿತಾತ್ಮಕ ಮಾನ್ಯತೆ, ಪ್ರವಾಸೋದ್ಯಮ ನೀತಿ, ಮೀನುಗಾರಿಕೆ ಮತ್ತು ಕೈಗಾರಿಕಾ ವಲಯ, ವೈದ್ಯಕೀಯ ಶಿಕ್ಷಣ, ರಸ್ತೆ-ಸಂಪರ್ಕ ಹಾಗೂ ಧಾರ್ಮಿಕ-ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದ ನಿರ್ಧಾರಗಳು ಮಂಗಳೂರು ಸಂಪುಟ ಸಭೆಯ ಪ್ರಮುಖ ಅಂಶಗಳಾಗಿವೆ.








