ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಇಂದು ನಿಧನರಾದರು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು.
ಸಿಂಗ್ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.ಈ ಹಿಂದೆ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ
ಗೌರವಕ್ಕೆ ಪಾತ್ರರಾದ ಹಾಗೂ ಮಿತಭಾಷಿಯೂ ಆದ ಡಾ.ಮನಮೋಹನ್ ಸಿಂಗ್ ಅವರು 1990ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದವರು ಹೀಗಾಗಿ ಅವರನ್ನು ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಹೆಸರು ಪಡೆದಿದ್ದರು.ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರ, 2004ರಿಂದ 2014ರ ವರೆಗೆ ಪ್ರಧಾನಿಯಾಗಿದ್ದರು.ಅಸ್ಸಾಂನಿಂದ ಐದು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಅಲ್ಪಾವಧಿಗೆ ರಾಜಸ್ಥಾನದಿಂದ ಆಯ್ಕೆಯಾಗಿ ಮೇಲ್ಮನೆ ಪ್ರವೇಶಿಸಿದ್ದರು. 1998ರ ಮಾರ್ಚ್ 21ರಿಂದ 2004ರ ಮೇ 21ರ ವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.
ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು.
ಮನಮೋಹನ್ ಸಿಂಗ್ 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದರು.
2024ರ ಎಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿದೆ. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದರು.ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.