ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದ ಹಿರಿಯ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (66) ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು
ಬೆಳಗಿನ ಜಾವ 3:15ಕ್ಕೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಚಿವ ಡಿ. ಸುಧಾಕರ್ ಅವರು ಕಳೆದ ಕೆಲವು ಸಮಯದಿಂದ ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಮೊದಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿತು.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.
ಡಿ. ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ನಾಯಕರಲ್ಲಿ ಒಬ್ಬರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರಿಯ ನಾಯಕರಾಗಿದ್ದರು. ಪ್ರಸ್ತುತ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ, ತಮ್ಮ ಸ್ವಂತ ಜಿಲ್ಲೆಯಾದ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದ್ದರು.ಈ ಹಿಂದೆ ಹಲವು ಬಾರಿ ಶಾಸಕರಾಗಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದರು.











