ಬೆಂಗಳೂರು: ವಿಧಾನಪರಿಷತ್ನ 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಕ್ತಾಯವಾಗಿದ್ದು ಮೂರು ಸ್ಥಾನ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ 3 ಸ್ಥಾನ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಪಡೆದಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು
ಜಯಭೇರಿ ಬಾರಿಸಿದರೆ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಶಾಲಿಗಳಾಗಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಬಾರಿಗೆ ಗೆಲುವಿನ ನಗೆ ಬೀರಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ದಾಖಲಿಸಿದರು.ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ 8,909 ಮತ ಪಡೆದು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆದ್ದರು.
ವಿಧಾನಷರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರಗಳಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಗೆದ್ದರೆ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದಿಂದ ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ ಜಯಶಾಲಿಯಾದರು.