ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೋಚಾ ಚಂಡಮಾರುತ ತೀವ್ರ ಸ್ವರೂಪ ತಾಳಿರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೋರ್ಟ್ ಬ್ಲೇರ್ನಿಂದ 520 ಕಿ.ಮೀ. ದೂರದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ಇಂದು ಬೆಳಿಗ್ಗೆ 5.30ರ ಸುಮಾರಿಗೆ ತೀವ್ರ ಸ್ವರೂಪ ತಾಳಿರುವುದಾಗಿ ತಿಳಿಸಿದೆ. ಭಾರತದ ಪಶ್ಚಿಮ ಕರಾವಳಿಯಲ್ಲಿ ಚಂಡಮಾರುತದ ಪ್ರಭಾವ

ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ದೀಘಾದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳನ್ಬು ನಿಯೋಜಿಸಿದೆ. ಭಾನುವಾರದವರೆಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಗಾಳಿ, ಮಳೆಯಾಗುವ ಸಾಧ್ಯತೆಯಿದೆ. ಮೋಚಾ ಚಂಡಮಾರುತ ಮೇ 14ರ ವೇಳೆಗೆ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ಗೆ ಅಪ್ಪಳಿಸುವ ಸಾಧ್ಯತೆಯಿದೆ. ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಭಾನುವಾರದಂದು ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿಯೂ ಮುಂದಿನ ಎರಡು ದಿನ (ಮೇ 12 ಹಾಗೂ 13) ಹಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆಯಾಗಿತ್ತು.