ಮಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್ ವಿಚಾರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷವು ನಿಂತ ನೀರಾಗಬಾರದು. ಹೊಸಬರು
ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂಬುದು ನಮ್ಮ ಗುರಿ ಎಂದು ಹೇಳಿದರು. ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. 15 ವರ್ಷ ಕೆಲಸ ಮಾಡಿದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ.ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು ಎಂದು ನಳಿನ್ ಹೇಳಿದರು.









