ಕಠ್ಮಂಡು: ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಮತ್ತು ಭ್ರಷ್ಟಾಚಾರ ವಿರೋಧಿಸಿ ನೇಪಾಳದ ವಿವಿಧೆಡೆ ಕಳೆದ ಎರಡು ದಿನಗಳಿಂದ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಕೆಲವರು ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ.ಹಿಂಸಾಚಾರ ಮುಂದುವರಿದ ಹಿನ್ನೆಲೆಯಲ್ಲಿ
ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಓಲಿ ಅವರ ರಾಜೀನಾಮೆ ಕೂಡ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿತ್ತು. ಕಳೆದ ಎರಡು ದಿನಗಳಿಂದ ನಡೆದ ಪ್ರತಿಭಟನೆಯಲ್ಲಿ 19ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ. ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಯುವಕರು ದೇಶದಾದ್ಯಂತ ಪ್ರತಿಭಟನೆ ನಡೆಸಿದರು. ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಿತು.
ಪ್ರತಿಭಟನೆ ತೀವ್ರಸ್ವರೂಪ ಪಡೆದು ಕಠ್ಮಂಡು ಸೇರಿದಂತೆ ನೇಪಾಳದೆಲ್ಲಡೆ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ಹಲವು ಮಂದಿ ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದರು.
ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಸೋಮವಾರ ತಡರಾತ್ರಿ ಘೋಷಿಸಿದೆ.ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಿ ನಿಯಂತ್ರಣಕ್ಕೆ ತರಲು ಸರ್ಕಾರವು ಸೇನೆಯನ್ನು ನಿಯೋಜಿಸಿದ್ದು ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಪ್ರಧಾನಿ ರಾಜಿನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.












