ಬೆಂಗಳೂರು: ಬಿಕ್ಕಟ್ಟು ಸೃಷ್ಠಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಿದೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಅಗಲಿದ್ದಾರೆ. ಇದರ ಅಧಿಕೃತ ಪ್ರಕಟಣೆ ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್
ಶಾಸಕಾಂಗ ಪಕ್ಷ ಸಭೆಯಲ್ಲಿ ನಡೆಯಲಿದೆ. ಮೇ 20ರಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಬುಧವಾರ ದಿನವಿಡೀ ನಡೆದ ಸರಣಿ ಸಭೆಗಳ ಅಂತ್ಯದಲ್ಲಿ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಸಂಧಾನಸೂತ್ರಕ್ಕೆ ಬರಲು ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ತಮಗೇ ಸಿಎಂ ಪಟ್ಟ ಬೇಕು ಎಂದು ಹಠ ಹಿಡಿದ ಕಾರಣಕ್ಕಾಗಿ ಕಗ್ಗಂಟಾಗಿದ್ದ ಮಾತುಕತೆ ಕೊನೆಗೂ ತಿಳಿಯಾಗಿದ್ದು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಪಟ್ಟವನ್ನು ಸ್ವೀಕರಿಸಲು ಕೊನೆಗೂ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪ್ರಮುಖ ನಾಯಕರು ನಡೆಸಿದ ಸಭೆಯಲ್ಲಿ ಅಂತಿಮವಾಗಿ ಈ ತೀರ್ಮಾನಕ್ಕೆ ಬರಲಾಗಿದೆ. ಆದರೆ, ಇದರ ಪ್ರಕಟಣೆ ಗುರುವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷ ಸಭೆಯಲ್ಲಿ ನಡೆಯಲಿದೆ.
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ 50:50 ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಂದಾಗಿದೆ. ಇದರಡಿಯಲ್ಲಿ ಮೊದಲು ಸಿದ್ದರಾಮಯ್ಯ ಮತ್ತು ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ. ಆದರೆ, ಮೊದಲ ಅವಧಿ ಎರಡು ವರ್ಷ ಇರುತ್ತದೆಯೋ, ಎರಡೂವರೆ ವರ್ಷ ಇರುತ್ತದೆಯೋ ಎನ್ನುವುದು ಇನ್ನೂ ಸ್ಪಷ್ಟ ಆಗಿಲ್ಲ. ಈ ಸಂಬಂಧ ಗುರುವಾರ ಇನ್ನೊಂದು ಹಂತದ ಸಭೆ ನಡೆಯುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್
ನೂತನ ಶಾಸಕಾಂಗ ಪಕ್ಷ ನಾಯಕನ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಶಾಸಕಾಂಗ ಪಕ್ಷ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಶಾಸಕರ ಸಮ್ಮುಖದಲ್ಲಿ ಸಿಎಂ ಹೆಸರು ಘೋಷಣೆ ಮಾಡುವ ಸಾಧ್ಯತೆಗಳಿವೆ.
ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಕೆಲವು ಸಂಪುಟ ಸಚಿವರ ಪ್ರಮಾಣವಚನ ಕಾರ್ಯಕ್ರಮ ಮೇ 20ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದೆ ಎಂದು ತಿಳಿದುಬಂದಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಭರ್ಜರಿ ಬಹುಮತವನ್ನು ಪಡೆದಿತ್ತು. ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನ ಹಾಗೂ ನಾಲ್ವರು ಇತರರು ಗೆದ್ದಿದ್ದರು.