ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಷ್ಟ್ರೀಯ ಹೆದ್ದಾರಿ ವಿವಿದೆಡೆ ಅಪಘಾತಗಳನ್ನು
ತಡೆಗಟ್ಟಲು ರಸ್ತೆ ಅಗಲೀಕರಣ, ಬೈಪಾಸ್, ಫ್ಲೈ ಓವರ್ ಸೇರಿದಂತೆ ಒಟ್ಟು 24 ವಿವಿಧ ಕಾಮಗಾರಿಗಳನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗುರುತಿಸಲಾಗಿತ್ತು. ಆದರೆ ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರ ಕಾರಣ ಮುಂದೊಡ್ಡಿ ಕಾಮಗಾರಿಗಳನ್ನು ಇನ್ನೂ ಕೈಗೊತ್ತಿಕೊಳ್ಳದಿರುವುದು ಕಂಡು ಬಂದಿದೆ. ಇದರಿಂದ ಸಂಚಾರ ಸಮಸ್ಯೆ ಇನ್ನಷ್ಟು ದಟ್ಟಣೆಯಾಗಿದೆ. ಸಂಚಾರ ಪೊಲೀಸ್ ಸಹಕಾರ ಪಡೆದು ಈ ಎಲ್ಲಾ ಕಾಮಗಾರಿಗಳನ್ನು ಮುಂದಿನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಬ್ದುಲ್ಲಾ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವಿವರ ನೀಡಿದರು.ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಜಿಲ್ಲೆಯಲ್ಲಿ 2025 ರ ಅಕ್ಟೋಬರ್ 30 ರವರೆಗೆ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ 720 ಪ್ರಕರಣಗಳನ್ನು ದಾಖಲಿಸಿ, ರೂ. 17.39 ಲಕ್ಷ ದಂಡ ಹಾಗೂ ಟಿಂಟೆಡ್ ಗ್ಲಾಸ್ ಅಳವಡಿಸಿದ ವಾಹನಗಳ ಮೇಲೆ 8066 ಪ್ರಕರಣ ದಾಖಲಿಸಿ, ರೂ. 38.39 ಲಕ್ಷ ದಂಡ ವಿಧಿಸಲಾಗಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹಮ್ಮದ್ ನಜೀರ್, ಡಿಸಿಪಿ ರವಿಶಂಕರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯ್ಕ್ ಮತ್ತಿತರರಿದ್ದರು.







