ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ತ ಸರಕಾರ ಹಸಿರು ನಿಶಾನೆ ತೋರಿದೆ. ಮಾಣಿಯಿಂದ ಸಂಪಾಜೆ ತನಕ ದಕ್ಷಿಣ ಕನ್ನಡ ಜಿಲ್ಲೆಯ ಭಾಗ 76 ಕಿ.ಮಿ.ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಮಾಡಲು ಡಿಪಿಆರ್ (ಡಿಟೇಲ್ಡ್ ಪ್ರಾಜೆಕ್ಟ್ ರಿಪೋರ್ಟ್) ತಯಾರಿಸಲು ಟೆಂಡರ್ ನಡೆಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಸ್ತೆಗಳು ಚತುಷ್ಪಥ ರಸ್ತೆಯಾಗಿ

ಅಭಿವೃದ್ಧಿ ಆಗಲಿದೆ. ಮಾಣಿ ಮೈಸೂರು ರಸ್ತೆ ಮಾತ್ರ ಅಭಿವೃದ್ಧಿಗೆ ಉಳಿದಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು ಅವರು ಅದರ ಅಭಿವೃದ್ಧಿಗೆ ಅನುಮೋದನೆ ನೀಡಿದ್ದಾರೆ. ಸುಮಾರು ಎರಡು ಸಾವಿರ ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಆಗಲಿದೆ. ಡಿಪಿಆರ್ ಆದ ಬಳಿಕ ಟೆಂಡರ್ ಮತ್ತಿತರ ಪ್ರಕ್ರಿಯೆ ನಡೆದು ಕಾಮಗಾರಿ ಆರಂಭ ಆಗಲಿದೆ.
ಸುಳ್ಯ ನಗರದಲ್ಲಿ ಬೈಪಾಸ್ ರಸ್ತೆ ನಿರ್ಮಾಣದ ಪ್ರಸ್ತಾವನೆ ಇದೆ. ಡಿಪಿಆರ್ ಆದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟತೆ ದೊರೆಯಲಿದೆ ಎಂದರು.
ಬಿಸಿ ರೋಡ್ ಅಡ್ಡಹೊಳೆ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಮುಗಿಯಲಿದೆ. ಶಿರಾಡಿ ಘಾಟಿ ರಸ್ತೆಗೆ ಅನುದಾನ ಇದೆ. ಚಾರ್ಮಾಡಿ ಘಾಟಿ ಅಭಿವೃದ್ಧಿ ಪ್ರಗತಿಯಲ್ಲಿ ಇದೆ. ಕೇಂದ್ರ ಸರಕಾರ ರಾಷ್ಟ್ರೀಯ ಹೆದ್ದಾರಿಗಳ

ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಕೂಡ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಕಾಣಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋದ್ ಶೆಟ್ಟಿ ಮೇನಾಲ, ನ.ಪಂ.ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.









